
ಮೈಸೂರು: ನೀಟ್ ಪರೀಕ್ಷೆಯ ಜಾಗೃತಿ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಸಂತಾಪ ಸೂಚಿಸಲು ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿನ ಮಹಾರಾಣಿ ಪಿಯು ಕಾಲೇಜಿನ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ, ಜಟಾಪಟಿಗೆ ವೇದಿಕೆಯಾಯಿತು.
ಕಾಂಗ್ರೆಸ್ ವತಿಯಿಂದ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ನೀಟ್ ಜಾಗೃತಿ ಕಾರ್ಯಕ್ರಮದಲ್ಲಿ ಮೃತ ವಿದ್ಯಾರ್ಥಿಗಳ ಭಾವಚಿತ್ರಗಳ ಜತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫೋಟೋವನ್ನು ಎಲ್‌ಇಡಿ ಪರದೆಯ ಮೇಲೆ ಪ್ರದರ್ಶಿಸಲಾಗಿತ್ತು. ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹಾಗೂ ಅವರ ಬೆಂಬಲಿಗರು, ಕಾಲೇಜು ಆವರಣದಲ್ಲಿ ಮೃತ ವಿದ್ಯಾರ್ಥಿಗಳ ಬ್ಯಾನರ್ ಹಾಗೂ ರಾಹುಲ್ ಗಾಂಧಿ ಭಾವಚಿತ್ರ ಅಳವಡಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಪವಿತ್ರವಾದ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯವಾಗಿ ಪ್ರಚೋದಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆತರಲಾಗುತ್ತಿದೆ ಎಂದು ಕಿಡಿ ಕಾರಿದರು.
ಆತ್ಮಹತ್ಯೆಗೆ ಶರಣಾದ ಅಮಾಯಕ ವಿದ್ಯಾರ್ಥಿಗಳ ಶ್ರದ್ಧಾಂಜಲಿಯಲ್ಲಿ ರಾಹುಲ್ ಗಾಂಧಿ ಫೋಟೋ ಹಾಕುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿ, ಸ್ಥಳದಲ್ಲಿದ್ದ ಬ್ಯಾನರ್ ತೆರವುಗೊಳಿಸಿ, ಎಲ್‌ಇಡಿ ಪ್ರದರ್ಶನವನ್ನು ಸ್ಥಗಿತಗೊಳಿಸಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರೊಂದಿಗೆ ನಾಗೇಂದ್ರ ಮಾತಿನ ಚಕಮಕಿ ನಡೆಸಿದರು. ಶಾಲಾ-ಕಾಲೇಜು ಅಂಗಳದಲ್ಲಿ ಕಾಂಗ್ರೆಸ್ ತನ್ನ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಿದ್ದಾದರೂ ಹೇಗೆ ಎಂದು ಹರೀಶ್ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಫೋನ್ ಮೂಲಕ ದೂರು ನೀಡಿ, ಕಾಲೇಜು ಆವರಣದಲ್ಲಿ ರಾಜಕೀಯ ಪ್ರಚೋದಿತ ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದರು.
ಬಳಿಕ ಕಾಲೇಜಿನ ಪ್ರಾಂಶುಪಾಲರ ಕೊಠಡಿಗೆ ತೆರಳಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿಮ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ನವರಿಗೆ ಶಾಲೆಗಳಲ್ಲಿ ರಾಜಕೀಯ ಮಾಡಲು ಅವಕಾಶ ನೀಡುವುದಾದರೆ, ನಾಳೆಯಿಂದ ನಮಗೂ ಶಾಲಾ ಆವರಣದಲ್ಲಿ ಕಾರ್ಯಕ್ರಮ ಮಾಡಲು ಅವಕಾಶ ಕೊಡಿ ಎಂದು ಆಗ್ರಹಿಸಿದರು.
ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
—–ಕೋಟ್—-
ಇದು ನೀಟ್ ಪರೀಕ್ಷೆ ಸಂಬAಧ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕಾರ್ಯಕ್ರಮ ಎಂದು ನಾನು ಭಾವಿಸಿದ್ದೆ. ಕಾರ್ಯಕ್ರಮ ಮಾಡುವ ವಿಚಾರವಾಗಿ ಸ್ಥಳೀಯ ಶಾಸಕರು ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಪತ್ರದ ಅನುಸಾರ ನಾನು ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದೆ. ರಾಹುಲ್ ಗಾಂಧಿಯವರ ಫೋಟೋ ಹಾಕಿರುವುದು ನನ್ನ ಗಮನಕ್ಕೆ ಬಂದಿಲ್ಲ. ಮೇಲಾಧಿಕಾರಿಗಳ ಆದೇಶ ಪಾಲನೆ ಮಾಡಿದ್ದೇನೆ. ವಿಷಯ ತಿಳಿದ ಬಳಿಕ ಬ್ಯಾನರ್ ತೆಗೆಸಿದ್ದೇನೆ.
-ಸೋಮಣ್ಣ, ಮಹಾರಾಣಿ ಕಾಲೇಜಿನ ಪ್ರಾಂಶುಪಾಲ
ನೀಟ್ ಜಾಗೃತಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ನಾಯಕರು ಮಾಡುತ್ತಿರುವ ಆರೋಪ ಸುಳ್ಳು. ಇಲ್ಲಿ ಯಾವುದೇ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಿಲ್ಲ. ರಾಹುಲ್ ಗಾಂಧಿ ಫೋಟೋ ಕೂಡ ಹಾಕಿಲ್ಲ.
-ಕೆ.ಹರೀಶ್ ಗೌಡ, ಶಾಸಕ