
ಮೈಸೂರು: ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಖಾಲಿ ಬಿಂದಿಗೆಗಳನ್ನು ಹಿಡಿದು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಅಗ್ರಹಾರದ ಮಾಧವರಾವ್ ವೃತ್ತದಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದುಕೊಂಡು ಜಮಾಯಿಸಿದ ಪ್ರತಿಭಟನಾಕಾರರು, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಕೊರತೆಯಿಂದ ಜಲಾಶಯಗಳು ಬರಿದಾರಿವೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಕಾವೇರಿ ವಿಚಾರದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರ, ತಮಿಳುನಾಡು ಮುಖ್ಯಮಂತ್ರಿ ವಿಜಯ್ಗೆ ಧಿಕ್ಕಾರ, ಮೇಕೆದಾಟು ಯೋಜನೆ ಜಾರಿಗೆ ಬರಲಿ, ರಕ್ತ ಕೊಟ್ಟೇವು ಕಾವೇರಿ ನೀರು ಬಿಡೆವು, ಕಾವೇರಿ ನಮ್ಮದು ಎಂಬ ಘೋಷಣೆಗಳನ್ನು ಕೂಗಿದರು.
ಈ ವೇಳೆ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್ ಮಾತನಾಡಿ, ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳು ಭರ್ತಿಯಾಗಿಲ್ಲ. ಕುಡಿಯುವ ನೀರಿಗೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ರಾಜ್ಯದ ಎಲ್ಲೆಯೊಳಗೆ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಯನ್ನು ಈ ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದಾಗಬೇಕು. ಕಾವೇರಿ ನೀರಿನ ಹಕ್ಕನ್ನು ಕಾಪಾಡಲು ರಾಷ್ಟಿçÃಯ ಜಲನೀತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರುಗಳಾದ ಮಧುವನ ಚಂದ್ರು, ಪುರುಷೋತ್ತಮ, ದೂರ ಸುರೇಶ್, ವೇಣುಗೋಪಾಲ್, ಬಸವರಾಜು, ಮಲ್ಲೇಶ್, ಗಣೇಶ್, ಮುನಾವರ್ ಪಾಷ, ತಾಯೂರು ಗಣೇಶ್ಮೂರ್ತಿ, ಬಲರಾಂ, ಲಿಂಗಯ್ಯ, ನಾಗಮ್ಮ, ನವೀನ್, ಪುಟ್ಟತಾಯಮ್ಮ, ಸಾವಿತ್ರಿ, ರುಕ್ಮಿಣಿ, ಚಂದ್ರಕಲಾ, ಮಹದೇವಮ್ಮ, ದೇವಿ, ಕಮಲಮ್ಮ, ಜಯಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.