
ಮೈಸೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣವೇ ಉನ್ನತ ಮಟ್ಟದ ಕಾನೂನು ಹೋರಾಟ ರೂಪಿಸಬೇಕು. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು. ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ಪ್ರಾರ್ಥಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಾಗದೆ ಬರಗಾಲ ಆವರಿಸಿದೆ. ಜಲಾಶಯಗಳಲ್ಲಿ ಕುಡಿಯುವುದಕ್ಕೂ ನೀರಿಲ್ಲದಂಹ ಪರಿಸ್ಥಿತಿಯಿದೆ. ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನಿತ್ಯವೂ 3500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶಿಸಿರುವುದು ಸರಿಯಲ್ಲ. ಇದನ್ನು ಪಾಲನೆ ಮಾಡಬಾರದು.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಬಾರದು. ರೈತರ ಹಿತರಕ್ಷಣೆಗೆ ಬದ್ಧವಾಗಿರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ರಘು ಕೌಟಿಲ್ಯ, ಬಿಜೆಪಿ ಗ್ರಾಮಾಂತರ ಮಾಜಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
