ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣವೇ ಅನುಮತಿ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ನಿ0ದ ಪ್ರತಿಭಟನೆ
ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣವೇ ಅನುಮತಿ ನೀಡಬೇಕೆಂದು ಆಗ್ರಹಿಸಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಚಿಕ್ಕ ಗಡಿಯಾರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಮಾತನಾಡಿ, ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಒಗ್ಗಟ್ಟು ಪ್ರದರ್ಶಿಸಬೇಕು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಯೋಗ ತೆರಳಿ ಯೋಜನೆಗೆ ಅನುಮತಿ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಈ ಹಿಂದೆ ಸಲ್ಲಿಸಲಾಗಿದ್ದ ಡಿಪಿಆರ್ ಹಿಂಪಡೆಯುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಪರಿಷ್ಕöÈತ ಯೋಜನಾ ವರದಿಗೆ ತಕ್ಷಣವೇ ಒಪ್ಪಿಗೆ ನೀಡಬೇಕು ಎಂದು ಆಗ್ರಹಿಸಿದರು.
ಅಂದಾಜು 9,000 ರಿಂದ 14,000 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, 67 ಟಿಎಂಸಿ ನೀರು ಸಂಗ್ರಹಣೆಯ ಸಾಮರ್ಥ್ಯ ಇದೆ.. ಪ್ರಸ್ತಾವಿತ ಜಲಾಶಯ ಯೋಜನೆ ಮೂಲಕ 400 ಮೆಗಾವ್ಯಾಟ್ ಜಲವಿದ್ಯುತ್ ಉತ್ಪಾದನೆ ಮಾಡಬಹುದು. ಬೆಂಗಳೂರು ಮಹಾನಗರಕ್ಕೆ 4 ರಿಂದ 5 ಟಿಎಂಸಿ ಸೇರಿದಂತೆ ಬೆಂಗಳೂರು, ರಾಮನಗರ ಹಾಗೂ ಚನ್ನಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಸಿಗಲಿದೆ. ಮಳೆಗಾಲದಲ್ಲಿ ಸುಮ್ಮನೆ ಸಮುದ್ರ ಸೇರುವ ಸುಮಾರು 6 ರಿಂದ 7 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಬಹುದಾಗಿದೆ. ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಿಲ್ಲ ಎಂದರು.
ಬಿಳುಗುAಡ್ಲು ಮಾಪನ ಕೇಂದ್ರದ ಮೂಲಕ ತಮಿಳುನಾಡಿಗೆ ನಿಗದಿಪಡಿಸಿದ ನೀರನ್ನು ಹರಿಸಲು ಕರ್ನಾಟಕ ಬದ್ಧವಾಗಿದೆ. ಬರಗಾಲದ ಸಂದರ್ಭದಲ್ಲಿ ಕೆಆರ್‌ಎಸ್ ಜಲಾಶಯದಿಂದ ಬಿಟ್ಟ ನೀರನ್ನು ಮೇಕೆದಾಟು ಬಳಿ ಶೇಖರಿಸಿ, ಸಂಕಷ್ಟದ ಕಾಲದಲ್ಲಿ ಬಳಸಿಕೊಳ್ಳುವುದರಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ರೈತರಿಗೆ ಅನುಕೂಲವಾಗಲಿದೆ. ಕೇಂದ್ರ ಜಲ ಆಯೋಗದ ತಾಂತ್ರಿಕ ಅನುಮತಿ ನೀಡಿ, ರಾಜ್ಯ ವನ್ಯಜೀವಿ ಧಾಮದ ಅರಣ್ಯ ಭೂಮಿ ಬಳಕೆಯ ಹಸಿರು ನಿಶಾನೆ ತೋರಬೇಕು .ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಡಳಿತಾತ್ಮಕ ಒಪ್ಪಿಗೆ ನೀಡಬೇಕು ಎಂದು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಜಿ.ಕೇಶವ, ಎಸ್.ಎ.ರಹೀಂ, ಬಾಬು, ನಾಸೀರ್, ಮಹಮ್ಮದ್ ಜಾಫರ್, ನವೀದ್ ಪಾಷ, ಧನಪಾಲ್, ಸೈಯದ್ ಫಾರೂಕ್, ರವಿ, ಗುರು ರಾಮಪುರ ಸೇರಿದಂತೆ ಹಲವರು ಭಾಗವಹಿಸಿದ್ದರು.