
ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಿ.ಒಪಿ ಹಾಗೂ ರಾಸಾಯನಿಕ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ, ನೈಸರ್ಗಿಕ ಬಣ್ಣ ಬಳಸಿ ತಯಾರಿಸಿರುವ ಮಣ್ಣಿನ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಅಪರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬ ಆಚರಿಸುವ ಸಂಬAಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಸರ ಮಾಲಿನ್ಯ ತಡೆಯಲು ಮೈಸೂರು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಂಟಿಯಾಗಿ ಕಠಿಣ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣದ ಮೂರ್ತಿಗಳ ತಯಾರಿಕೆ, ಮಾರಾಟ, ಸಾಗಾಣಿಕೆ ಹಾಗೂ ಜಲಮೂಲಗಳಲ್ಲಿ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ ೨೭೯ ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದರು.
ಪಿಒಪಿ ವಿಗ್ರಹಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವ ಮಳಿಗೆಗಳಿಗೆ ವ್ಯಾಪಾರ ಅನುಮತಿ ನೀಡುವುದಿಲ್ಲ ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ ಪಿಒಪಿ ಮೂರ್ತಿಗಳು ಸರಬರಾಜಾಗುವುದನ್ನು ತಡೆಯಲು ಗಡಿ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ನಗರಪಾಲಿಕೆ ಆರೋಗ್ಯಾಧಿಕಾರಿಗಳು ಹಾಗೂ ವಲಯ ಆಯುಕ್ತರ ನೇತೃತ್ವದ ಸಮಿತಿಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅನಧಿಕೃತ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ, ಪಿ.ಒ.ಪಿ ಮೂರ್ತಿಗಳನ್ನು ವಶಪಡಿಸಿಕೊಂಡು ದಂಡ ವಿಧಿಸಬೇಕು ಎಂದು ಸೂಚಿಸಿದರು.
ನದಿ, ಕೆರೆ, ಬಾವಿ ಮುಂತಾದ ನೈಸರ್ಗಿಕ ಜಲಮೂಲಗಳಲ್ಲಿ ಪಿಒಪಿ ಅಥವಾ ರಾಸಾಯನಿಕ ಬಣ್ಣದ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದ್ದು, ಮನೆಗಳಲ್ಲಿ ಪೂಜಿಸುವ ಮೂರ್ತಿಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸಾರ್ವಜನಿಕ ಮೂರ್ತಿಗಳನ್ನು ಪಾಲಿಕೆ ನಿಗದಿಪಡಿಸುವ ಸಂಚಾರಿ ವಿಸರ್ಜನಾ ಟ್ಯಾಂಕರ್ ಅಥವಾ ಕೃತಕ ಹೊಂಡಗಳಲ್ಲಿ ಮಾತ್ರ ವಿಸರ್ಜಿಸಬೇಕು ಎಂದು ಹೇಳಿದರು.
ಸಾರ್ವಜನಿಕವಾಗಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಮಿತಿಗಳು ಸ್ಥಳೀಯ ಸಂಸ್ಥೆಗಳು ಪಾಲಿಕೆ, ನಗರಸಭೆ, ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಿದರು.
ಪೆಂಡಾಲ್‌ಗಳಲ್ಲಿ ಏಕಬಳಕೆ ಪ್ಲಾಸ್ಟಿಕ್, ಫ್ಲೆಕ್ಸ್ ಹಾಗೂ ತೋರಣಗಳ ಬಳಕೆಯನ್ನು ತಡೆಗಟ್ಟಲಾಗಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ರಾತ್ರಿ ೧೦ ರಿಂದ ಬೆಳಿಗ್ಗೆ ೬ ಗಂಟೆಯವರೆಗೆ ಧ್ವನಿವರ್ಧಕ (ಮೈಕ್) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಮೂರ್ತಿ ವಿಸರ್ಜನೆಗೂ ಮುನ್ನ ಹೂವು, ಹಣ್ಣು, ಬಾಳೆಕಂಬ ಸೇರಿದಂತೆ ಪೂಜಾ ಸಾಮಗ್ರಿಗಳ ಹಸಿಕಸವನ್ನು ಪ್ರತ್ಯೇಕಿಸಿ ಸ್ಥಳೀಯ ಸಂಸ್ಥೆಯ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು.
ಸಾರ್ವಜನಿಕರು ಪರಿಸರಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರ ಬಳಸಿ, ಹಬ್ಬವನ್ನು ಶ್ರದ್ಧೆ ಮತ್ತು ಪರಿಸರ ಕಾಳಜಿಯಿಂದ ಆಚರಿಸಬೇಕೆಂದು ಹೇಳಿದರು.
ಸಭೆಯಲ್ಲಿ ಎಎಸ್ಪಿ ಸಿ.ಮಲ್ಲಿಕ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.