Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹಸಿವು ಮತ್ತು ಅಪೌಷ್ಟಿಕತೆಯನ್ನು ದೂರಮಾಡೋಣ, ಆರೋಗ್ಯಕರ ಭಾರತವನ್ನು ನಿರ್ಮಿಸೋಣ;ಡಾ. ಸುಮನಾ ಕೆ


ಮೈಸೂರು: ಹಸಿವು ಮತ್ತು ಅಪೌಷ್ಟಿಕತೆಯನ್ನು ದೂರಮಾಡೋಣ, ಆರೋಗ್ಯಕರ ಭಾರತವನ್ನು ನಿರ್ಮಿಸುವುದಕ್ಕೆ ಎಲ್ಲರೂ ಕೈಜೋಡಿಸಿ, ಶ್ರಮಿಸಬೇಕು ಎಂದು ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಸೂಕ್ಷ್ಮಜೀವಶಾಸ್ತ್ರ ವಿಭಾಗ ಹಾಗೂ ಡೆಪ್ಯೂಟಿ ಡೀನ್–ಐಕ್ಯೂಎಸಿ ಡಾ. ಸುಮನಾ ಕೆ ತಿಳಿಸಿದರು.
ಮೈಸೂರಿನ ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲಿತ ಹಾಗೂ ಪೌಷ್ಟಿಕ ಆಹಾರದ ಮಹತ್ವವನ್ನು ವಿವರಿಸಿದರು. ಇಂದಿನ ಯುವಜನರು ಆರೋಗ್ಯಕರ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದ್ದು, ಜಂಕ್ ಆಹಾರದ ಅತಿಯಾದ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತರಾಗಬೇಕು ಎಂದು ತಿಳಿಸಿದರು. ಸಿರಿಧಾನ್ಯಗಳು, ಹಣ್ಣು-ತರಕಾರಿಗಳು ಹಾಗೂ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ದೈನಂದಿನ ಆಹಾರದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯಕರ ಭವಿಷ್ಯ ನಿರ್ಮಾಣದಲ್ಲಿ ಪೌಷ್ಟಿಕಾಂಶದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಸರಿಯಾದ ಆಹಾರ ಪದ್ಧತಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ ಹಾಗೂ ಉತ್ತಮ ಆಹಾರ ಪದ್ಧತಿಗಳ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದರು.
ವಿದ್ಯಾರ್ಥಿಗಳು ಪೌಷ್ಟಿಕ ಆಹಾರದ ಮಹತ್ವವನ್ನು ಅರಿತು ತಮ್ಮ ದೈನಂದಿನ ಜೀವನದಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಅಭಿಜಿತ್ ಎಂ. ಸಿಂಗ್ , ಅಧ್ಯಾಪಕರುಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಒಂದು ವಾರಗಳ ಕಾಲ ನಡೆದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಆಹಾರ ಮತ್ತು ಸಮತೋಲಿತ ಪೌಷ್ಟಿಕಾಂಶದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಆಹಾರ ಜೈವಿಕ ತಂತ್ರಜ್ಞಾನ ಕುರಿತು ತಜ್ಞರಿಂದ ಉಪನ್ಯಾಸ, ಆಹಾರ ಕಲಬೆರಕೆ ಪರೀಕ್ಷೆಯ ಪ್ರಾತ್ಯಕ್ಷಿಕೆ, ಹಸಿವು ಮತ್ತು ಅಪೌಷ್ಟಿಕತೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ, ಜಂಕ್ ಆಹಾರವನ್ನು ತ್ಯಜಿಸುವ ಕುರಿತು ಪ್ರತಿಜ್ಞಾ ವಿಧಿ ಮತ್ತು ಪ್ರತಿಜ್ಞಾ ಸ್ವೀಕಾರ, ಸೂಪರ್ ಫುಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಸಿರಿಧಾನ್ಯಗಳ ಪೌಷ್ಟಿಕ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳ ಜ್ಞಾನ ಮತ್ತು ಆಸಕ್ತಿಯನ್ನು ಹೆಚ್ಚಿಸುವ ಸಲುವಾಗಿ ಪೌಷ್ಟಿಕಾಂಶ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ಆರೋಗ್ಯಕರ ಆಹಾರ ಪದ್ಧತಿ, ಪೌಷ್ಟಿಕಾಂಶದ ಮಹತ್ವ ಹಾಗೂ ಜಂಕ್ ಆಹಾರ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.