
ನಂಜನಗೂಡು; ಅ.26ರ ಸೋಮವಾರದಂದು ನಂಜನಗೂಡಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಅದ್ದೂರಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ಎಲ್ಲಾ ಗ್ರಾಮಗಳ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಾಲೂಕು ನಾಯಕರ ಸಂಘದ ಅಧ್ಯಕ್ಷ ಕೆ.ನಾಗರಾಜು ಹೇಳಿದರು.
ಅವರು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಂದು ಬೆಳಗ್ಗೆ 10 ಗಂಟೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಾಲ್ಮೀಕಿ ಅವರ ಪುತ್ಥಳಿಯನ್ನು ವಿವಿಧ ಜಾನಪದ ಕಲಾತಂಡಗಳೊಂದಿಗೆ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನದವರೆಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಗುವುದು, ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಬೆಳಗ್ಗೆ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಜರಗಲಿದ್ದು, ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಉದ್ಘಾಟಿಸಲಿದ್ದು ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆ ವಹಿಸಲಿದ್ದಾರೆ, ಸಂಸದ ಸುನಿಲ್ ಬೋಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕೆಪಿಸಿಸಿ ಕಾರ್ಯದರ್ಶಿ ಎಸ್.ಸಿ.ಬಸವರಾಜು ಮಾತನಾಡಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಯಕರ ಸಂಘದ ವತಿಯಿಂದ ಪ್ರಚಾರ ನಡೆಸಿ ಎಲ್ಲಾ ಗ್ರಾಮಗಳ ಮುಖಂಡರಿಗೂ ಆಹ್ವಾನ ನೀಡಲಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ಮಾತನಾಡಿ ಮಹರ್ಷಿ ವಾಲ್ಮೀಕಿ ಅವರು ಯಾವುದೇ ಒಂದು ಜನಾಂಗಕ್ಕೆ ಸೀಮಿತರಾದವರಲ್ಲ, ಅವರು ಸರ್ವ ಜನಾಂಗದ ಆಸ್ತಿಯಾಗಿದ್ದಾರೆ, ಆದ್ದರಿಂದ ತಾಲೂಕಿನ ಸರ್ವ ಜನಾಂಗದವರು ಕೂಡ ಆಗಮಿಸಿ ಜಯಂತಿ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಿವನಂಜನಾಯಕ, ಸುಧೀಂದ್ರ, ಸೂರಹಳ್ಳಿ ಲಕ್ಷ್ಮಣ, ಹಳ್ಳಿದಿಡ್ಡಿಮಂಜು, ರವಿ, ಶ್ರೀನಿವಾಸ, ಮಹೇಶ್, ರಮೇಶ್, ಸಿದ್ದರಾಜು, ನಾರಾಯಣ, ಕುಮಾರ, ರಾಜಣ್ಣ, ಮಹದೇವನಾಯಕ ಉಪಸ್ಥಿತರಿದ್ದರು.