
ಪಿರಿಯಾಪಟ್ಟಣ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಬೇಕಾದರೆ ಅವರ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದು ಮಾಜಿ ಸಚಿವ, ಹಾಲಿ ಶಾಸಕ ಕೆ.ವೆಂಕಟೇಶ್ ತಿಳಿಸಿದರು.
ಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ಹಾಗೂ ಆತ್ಮವಿಶ್ವಾಸ ತುಂಬಿ ಅವರನ್ನು ಗುರಿಯೆಡೆಗೆ ಕೊಂಡೊಯ್ಯುವ ಕೆಲಸವನ್ನು ಪ್ರತಿಯೊಬ್ಬ ಶಿಕ್ಷಕರು ಮಾಡಿದಾಗ ಮಾತ್ರ ಆ ವಿದ್ಯಾರ್ಥಿ ಯಶಸ್ಸಿನ ಮೆಟ್ಟಿಲೇರಲು ಸಾಧ್ಯ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ ಇದಕ್ಕೆ ಕಾರಣ ನಮ್ಮ ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಈಗ ತಾಲ್ಲೂಕಿನ ಪ್ರತಿ ಗ್ರಾಮಗಳಲ್ಲೂ ಸರ್ಕಾರಿ ಶಾಲೆಗಳಿವೆ ಅವುಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ನೀಡುವಲ್ಲಿ ನಾವು ಮುಂದಿದ್ದೇವೆ ಪ್ರಸ್ತುತ ತಾಲ್ಲೂಕಿನ 109 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳಿವೆ. ವಿದ್ಯಾರ್ಥಿಗಳು ತಾಂತ್ರಿಕವಾಗಿ ಬೆಳವಣಿಗೆ ಹೊಂದಲು ರೋಬೋಟ್ ಯಂತ್ರ ಖರೀದಿ ಮಾಡುವಂತೆ ಸಲಹೆಗಳು ಬಂದಿವೆ ಮುಂದಿನ ದಿನಗಳಲ್ಲಿ ಅದಕ್ಕೆ ಆದ್ಯತೆ ನೀಡಲಾಗುವುದು ಎಂದರು
ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಹೆಣ್ಣು ಹಂತದಲ್ಲೂ, ಪ್ರತಿ ಕ್ಷೇತ್ರಕ್ಕೂ ಪುರುಷರಿಗಿಂತ ಮುಂದಿದ್ದಾಳೆ, ಇಂದು ಶಿಕ್ಷಣ ಕ್ಷೇತ್ರದಲ್ಲಿ ಪುರುಷರಿಗಿಂತ ಶೇ. 56 ರಷ್ಟು ಸ್ಥಾನಗಳಲ್ಲಿ ಮುಂದಿದ್ದು, ಮುಂದಿನ ದಿನಗಳಲ್ಲಿ ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಮುಂದಿರುವ ದಿನಗಳು ಬರುತ್ತವೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದ ಅವರು ಇದರ ಹಿಂದೆ ಪ್ರತಿಯೊಬ್ಬ ಪುರುಷನು ತಂದೆಯಾಗಿ, ಅಣ್ಣನಾಗಿ, ಗಂಡನಾಗಿ ಹೆಣ್ಣಿನ ಸಾಧನೆಗೆ ಮೆಟ್ಟಿಲಾಗಿ ನಿಂತಿರುವುದು ಈ ದೇಶದ ಸಂಸ್ಕೃತಿಯ ಪ್ರತಿಬಿಂಬವಾಗಿದೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಬಿಇಒ ರವಿ ಪ್ರಸನ್ನ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಲಾಕ್ ಅಧ್ಯಕ್ಷ ಗಣೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೆಗೌಡ, ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು