
ಮೈಸೂರು; ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು, ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ನಗರಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯೆತೆ ನೀಡುವ ಮೂಲಕ, ನಗರಗಳ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ನಗರದ ಜಿಲ್ಲಾ ಪಂಚಾಯತ್ನ ಮಿನಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಮತ್ತು ಘನ ತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಘನ ತಾಜ್ಯ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಕಸವನ್ನು ಹಸಿ ಮತ್ತು ಒಣ ಕಸವಾಗಿ ಮನೆಯಿಂದಲೇ ಬೇರ್ಪಡಿಸಿ ಪಡೆದುಕೊಳ್ಳಬೇಕು. ಹಸಿ ಕಸವನ್ನು ಗೊಬ್ಬರ ತಯಾರಿಕೆಯಲ್ಲಿ ಬಳಕೆ ಹಾಗೂ ಒಣ ಕಸವನ್ನು ಮರುಬಳಕೆ ವಸ್ತುಗಳ ತಯಾರಿಕೆಯಲ್ಲಿ ಬಳಸಬೇಕು, ಮೈಸೂರು ನಗರವು ಸ್ವಚ್ಛ ನಗರವಾಗಿದೆ. ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದ್ದು, ಅಭಿವೃದ್ಧಿ ಹಲವು ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಬಿ.ಕಾವೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ರವೀಂದ್ರ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಎಂ ಕೆ ಸವಿತಾ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.